ಶೀಘ್ರದಲ್ಲೇ ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆ?

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಫೆ.19- ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮ ಮಾದರಿಯಲ್ಲೇ ಒಕ್ಕಲಿಗ ಅಭಿವೃದ್ದಿ ನಿಗಮವನ್ನು ಸ್ಥಾಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ವಿಶೇಷವೆಂದರೆ ಮೂರು ದಿನಗಳ ಹಿಂದೆಯಷ್ಟೇ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ.ನಿರ್ಮಲಾನಂದನಾಥ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ಸಮುದಾಯದ ಹಿತದೃಷ್ಟಿಯಿಂದ ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಸರ್ಕಾರದ ಮೇಲೆ ಒತ್ತಡ ಹಾಕಬೇಕೆಂಬ ತೀರ್ಮಾನವನ್ನು ಕೈಗೊಳ್ಳಲಾಗಿತ್ತು.

ಇದೀಗ ರಾಜ್ಯ ಸರ್ಕಾರ ಸಮುದಾಯದವರ ಬೇಡಿಕೆಯನ್ನು ಈಡೇರಿಸುವ ಮೊದಲ ಹೆಜ್ಜೆಯಾಗಿ ವೀರಶೈವ ಲಿಂಗಾಯಿತ ಅಭಿವೃದ್ಧಿ ನಿಗಮದಂತೆ ಒಕ್ಕಲಿಗ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ಮುಂದಾಗಿದೆ ಎಂದು ಗೊತ್ತಾಗಿದೆ. ಒಂದು ವೇಳೆ ಅಭಿವೃದ್ಧಿ ನಿಗಮ ಘೋಷಣೆಯಾದರೆ 500 ಕೋಟಿ ಆರ್ಥಿಕ ನೆರವನ್ನು ಸರ್ಕಾರ ಒದಗಿಸಲಿದೆ.

ಯಾವುದೇ ಸಂದರ್ಭದಲ್ಲೂ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಬೀಳುವ ಸಂಭವವಿದ್ದು, ಒಂದು ವೇಳೆ ತಕ್ಷಣವೇ ತೀರ್ಮಾನ ಕೈಗೊಳ್ಳದಿದ್ದರೂ ಮಾ.8ರಂದು ಮಂಡನೆಯಾಗಲಿರುವ ರಾಜ್ಯ ಬಜೆಟ್‍ನಲ್ಲಿ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದಲ್ಲಿ 2ನೇ ಅತಿದೊಡ್ಡ ಸಮುದಾಯವಾಗಿರುವ ಒಕ್ಕಲಿಗರಿಗೆ ಪ್ರತ್ಯೇಕವಾದ ಅಭಿವೃದ್ದಿ ನಿಗಮ ಸ್ಥಾಪನೆ ಮಾಡಬೇಕೆಂಬುದು ಸಮುದಾಯದ ದಶಕಗಳ ಬೇಡಿಕೆಯಾಗಿತ್ತು. ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಜನಾಂಗವೂ ಒಕ್ಕಲುತನವನ್ನೇ ನಂಬಿಕೊಂಡು ಬಂದಿದೆ. ಶೈಕ್ಷಣಿಕ, ಆರ್ಥಿಕ, ರಾಜಕೀಯ, ಸಾಂಸ್ಕøತಿಕ, ಧಾರ್ಮಿಕ, ವೈದ್ಯಕೀಯ, ಕೃಷಿ, ಸಂಗೀತ, ರಂಗಭೂಮಿ, ಜನಪದ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲೂ ತನ್ನದೇ ಆದ ಕೊಡುಗೆಯನ್ನು ನೀಡಿರುವ ಈ ಸಮುದಾಯಕ್ಕೆ ನಿಗಮ ಸ್ಥಾಪನೆಯಾಗಬೇಕೆಂಬುದು ಜನತೆಯ ಒತ್ತಾಸೆಯೂ ಆಗಿತ್ತು.

ಪ್ರಸ್ತುತ ಜನಾಂಗ ಎದುರಿಸುತ್ತಿರುವ ಸಮಸ್ಯೆಗಳು ನಿವಾರಣೆಯಾಗಬೇಕಾದರೆ ಸರ್ಕಾರ, ಒಕ್ಕಲಿಗ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಬೇಕು, ಆ ಮೂಲಕ ಜನಾಂಗದ ಅಭಿವೃದ್ಧಿಗೆ ನೆರವಾಗಬೇಕೆಂಬ ಅಭಿಪ್ರಾಯ ಸಭೆಯಲ್ಲಿ ಕೇಳಿಬಂದಿತ್ತು. ಈ ಎಲ್ಲ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಹಿಂದೆ ಒಕ್ಕಲಿಗ ಸಮುದಾಯದ ತಲಕಾಡು ಚಿಕ್ಕರಂಗೇಗೌಡ, ಮುಖಂಡರಾದ ಎ.ಎಚ್.ಆನಂದ್, ವೇಣುಗೋಪಾಲ್ ಮತ್ತಿತರರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲು ಮನವಿ ಪತ್ರ ಸಲ್ಲಿಸಿದ್ದನ್ನು ಸ್ಮರಿಸಬಹುದು.

Facebook Comments