6 ತಿಂಗಳು ಕಲ್ಯಾಣ ಮಂಟಪಗಳನ್ನುಮುಚ್ಚಲು ಮಾಲೀಕರಿಗೆ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಏ.10- ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂದಿನ 6 ತಿಂಗಳವರೆಗೆ ಅನ್ವಯವಾಗುವಂತೆ ನಗರದಲ್ಲಿರುವ ಎಲ್ಲಾ ಛತ್ರಗಳನ್ನು(ಚೌಲ್ಟ್ರಿ) ಬಂದ್ ಮಾಡಲು ಮಾಲೀಕರಿಗೆ ಸೂಚನೆ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ವಾರಗಳಿಂದ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಬಿಗಿಯಾದ ಕ್ರಮಗಳನ್ನು ಕೈಗೊಳ್ಳಬೇಕಿದೆ. ಮದುವೆ ಮಂಟಪದಲ್ಲಿ ಹೆಚ್ಚು ಜನರು ಗುಂಪುಗೂಡುವುದನ್ನು ತಡೆಗಟ್ಟಬೇಕು. ಹೀಗಾಗಿ ಮುಂದಿನ ಆರು ತಿಂಗಳು ಮದುವೆ ಮಂಟಪಗಳನ್ನು ತೆರೆಯದಂತೆ ಸಂಬಂಧಪಟ್ಟ ಮಾಲೀಕರಿಗೆ ಸೂಚನೆ ಕೊಡಲಾಗಿದೆ ಎಂದು ಹೇಳಿದರು.

ಇಂದಿನಿಂದ ಫ್ಲಾಟ್‍ಗಳಲ್ಲಿ ಲಸಿಕೆಗಳನ್ನು ನೀಡಲು ಬಿಬಿಎಂಪಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಕಾರ್ಯೋನ್ಮುಖರಾಗಿದ್ದಾರೆ. ಸಾರ್ವಜನಿಕರು ಸಹಕಾರ ಕೊಡಬೇಕು. ನಮಗೆ ಕೊರೊನಾ ಬಂದಿಲ್ಲ. ನಾವೇಕೆ ಚಿಕಿತ್ಸೆ ಮಾಡಿಕೊಳ್ಳಬೇಕು? ನಾವೇಕೆ ಲಸಿಕೆ ಹಾಕಿಸಿಕೊಳ್ಳಬೇಕೆಂದು ಪ್ರಶ್ನಿಸಬೇಡಿ.

ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚಾಗಿದ್ದರೂ ಸದ್ಯದ ಪರಿಸ್ಥಿತಿಯಲ್ಲಿ ಲಾಕ್‍ಡೌನ್ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಸ್ಪಷ್ಟಪಡಿಸಿದರು. ರಾಜ್ಯದಲ್ಲಿ ಲಾಕ್‍ಡೌನ್ ಮಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿಲ್ಲ. ಕೊರೊನಾ ನಿಯಂತ್ರಣಕ್ಕೆ ಬರಬೇಕಾದರೆ ಸಾರ್ವಜನಿಕರು ಕೂಡಲೇ ಎಚ್ಚೆತ್ತುಕೊಂಡು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ಮನವಿ ಮಾಡಿದರು.

ಸರ್ಕಾರದ ಮಟ್ಟದಲ್ಲಿ ಲಾಕ್‍ಡೌನ್ ಮಾಡಬೇಕೆಂಬ ಆಲೋಚನೆಯೂ ಇಲ್ಲ. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಇದರ ಅಗತ್ಯವಿಲ್ಲ ಎಂದು ಹೇಳಿರುವಾಗ ಆ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದರು. ಯಾವುದೇ ಕಾರಣಕ್ಕೂ ಸಾರ್ವಜನಿಕರು ಭಯಭೀತರಾಗಬೇಕಾದ ಅಗತ್ಯವಿಲ್ಲ. ಸೋಂಕಿತರನ್ನು ಆಸ್ಪತ್ರೆಯಲ್ಲಿ ದಾಖಲು ಮಾಡಿ ಉತ್ತಮವಾದ ಚಿಕಿತ್ಸೆ ಕೊಡಿಸಿದ್ದೇವೆ. ಸಮಸ್ಯೆ ಉದ್ಭವವಾಗದಂತೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದರು.

ಹೋಮ್ ಐಸೋಲೇಷನ್ ಆದವರಿಗೆ ಸೀಲ್ ಹಾಕಬೇಕೇ ಬೇಡವೇ ಎಂಬ ಬಗ್ಗೆ ಇನ್ನು ಯಾವುದೇ ರೀತಿಯ ತೀರ್ಮಾನ ಕೈಗೊಂಡಿಲ್ಲ. ಈ ಬಗ್ಗೆ ಯಾರಿಗೂ ಗೊಂದಲವೂ ಬೇಡ ಎಂದು ಮನವಿ ಮಾಡಿಕೊಂಡರು. ಸಾರ್ವಜನಿಕರಲ್ಲಿ ಕೊರೊನಾ ಬಗ್ಗೆ ಭಯಭೀತಿ ಇಲ್ಲದೆ ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ. ಇದರಿಂದಾಗಿ ಪಾಸಿಟಿವ್ ಮತ್ತು ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಮುಂದಿನ ದಿನಗಳಲ್ಲಿ ಹಬ್ಬ ಹರಿದಿನ, ಸಮಾರಂಭಗಳು ಇವೆ. ಜನರು ಇದನ್ನು ಲಘುವಾಗಿ ತೆಗೆದುಕೊಳ್ಳಬಾರದು ಎಂದು ಅಶೋಕ್ ಮನವಿ ಮಾಡಿದರು.

ಪ್ರಾಣ ಉಳಿದುಕೊಂಡರೆ ಹಬ್ಬವನ್ನು ಮುಂದಿನ ವರ್ಷ ಮಾಡಬಹುದು. ಮೊದಲು ನಿಮ್ಮ ಆರೋಗ್ಯದ ಕಡೆ ಗಮನಕೊಡಿ. ಯಾರೂ ಕೂಡ ನಿರ್ಲಕ್ಷ್ಯ ಮಾಡಬಾರದು. ಸೋಂಕು ಪ್ರಕರಣಗಳನ್ನು ತಡೆಯುವ ಕಾರಣಕ್ಕಾಗಿ ಕೊರೊನಾ ಕಫ್ರ್ಯೂ ಜಾರಿ ಮಾಡಲಾಗಿದೆ. ಇದಕ್ಕೆ ಎಲ್ಲರೂ ಸಹಕರಿಸಬೇಕೆಂದು ಕೋರಿದರು. ವಿರೋಧ ಪಕ್ಷದವರು ಎಲ್ಲದಕ್ಕೂ ವಿರೋಧ ಮಾಡುವುದೇ ಕಾಯಕವಾಗಿದೆ. ರಾಜ್ಯದಲ್ಲಿ ಲಾಕ್‍ಡೌನ್ ಜಾರಿ ಮಾಡಿದರೆ ಅದಕ್ಕೂ ಟೀಕೆ ಮಾಡುತ್ತಾರೆ. ಕೊರೊನಾ ಕಫ್ರ್ಯೂ ಜಾರಿ ಮಾಡಿದರೂ ವಿರೋಧಿಸುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಕರ್ನಾಟಕದಲ್ಲಿ ಕೊರೊನಾ ನಿರ್ವಹಣೆ ಮಾಡುವುದರಲ್ಲಿ ಸರ್ಕಾರ ವಿಫಲವಾಗಿದೆ ಎಂದು ಪ್ರತಿಪಕ್ಷದವರು ದೂರುತ್ತಿದ್ದಾರೆ. ಅವರದೇ ಪಕ್ಷ ಆಡಳಿತವಿರುವ ಮಹಾರಾಷ್ಟ್ರದಲ್ಲಿ ಎಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬುದು ಎಲ್ಲರಿಗೂ ಗೊತ್ತು. ಆ ರಾಜ್ಯದಲ್ಲಿ ಲಾಕ್‍ಡೌನ್ ಏಕೆ ಜಾರಿಮಾಡಿಲ್ಲ ಎಂದು ಪ್ರಶ್ನೆ ಮಾಡಿದರು.

ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಸಾರಿಗೆ ನೌಕರರ ಜೊತೆ ಮಾತುಕತೆ ನಡೆಸಲು ಸರ್ಕಾರ ಸಿದ್ಧವಿದೆ. ಸಾರ್ವಜನಿಕರಿಗೆ ತೊಂದರೆ ಕೊಟ್ಟು ಯಾರೊಬ್ಬರೂ ಮುಷ್ಕರ ನಡೆಸುವುದು ಸರಿಯಲ್ಲ. ಸಾರಿಗೆ ಸಿಬ್ಬಂದಿಯವರು ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು. ಹಠಮಾರಿ ಧೋರಣೆಯಿಂದ ಯಾವುದೇ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಆಕ್ಷೇಪಿಸಿದರು.

Facebook Comments