ಸಂಘಪರಿವಾರ-ಬಿಜೆಪಿ ನಾಯಕರ ವಿರುದ್ಧ ದಾಖಲಾಗಿದ್ದ ಕೇಸ್ ಗಳನ್ನು ಹಿಂಪಡೆಯಲು ಮುಂದಾದ ರಾಜ್ಯ ಸರ್ಕಾರ..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಡಿ.16- ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದ ಟಿಪ್ಪು ಜಯಂತಿ ಆಚರಣೆ ವೇಳೆ ಸಂಘಪರಿವಾರ ಹಾಗೂ ಬಿಜೆಪಿ ನಾಯಕರ ವಿರುದ್ಧ ದಾಖಲಾಗಿದ್ದ ಮೊಕದ್ದಮೆಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ಮುಂದಾಗಿದೆ. ಮುಂದಿನ ಸಚಿವ ಸಂಪುಟ ಸಭೆಯ ವೇಳೆ ರಾಜಧಾನಿ ಬೆಂಗಳೂರು, ಮಡಿಕೇರಿ, ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಬೆಳಗಾವಿ, ಉತ್ತರ ಕನ್ನಡ ಸೇರಿದಂತೆ ಮತ್ತಿತರ ಕಡೆ ದಾಖಲಾಗಿದ್ದ 150ಕ್ಕೂ ಹೆಚ್ಚು ಪ್ರಕರಣಗಳನ್ನು ಹಿಂಪಡೆಯಲು ಸರ್ಕಾರ ತೀರ್ಮಾನಿಸಿದೆ.

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ವೇಳೆ ನವೆಂಬರ್ 20ರಂದು ಟಿಪ್ಪು ಜಯಂತಿ ಆಚರಣೆ ಮಾಡುವ ತೀರ್ಮಾನವನ್ನು ತೆಗೆದುಕೊಂಡಿದ್ದರು.  ಇದಕ್ಕೆ ಆರ್‍ಎಸ್‍ಎಸ್, ಸಂಘಪರಿವಾರ, ವಿಎಚ್‍ಪಿ, ಭಜರಂಗದಳ, ಬಿಜೆಪಿ ಸೇರಿದಂತೆ ಮತ್ತಿತರ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಭಾರೀ ವಿರೋಧ ವ್ಯಕ್ತಪಡಿಸಿದ್ದರು.

ಆದರೂ ಸರ್ಕಾರ ಟಿಪ್ಪು ಜಯಂತಿ ಆಚರಣೆ ಮಾಡಲು ಮುಂದಾದಾಗ ರಾಜ್ಯದ ನಾನಾ ಕಡೆ ಸಂಘ ಪರಿವಾರದ ನಾಯಕರು ಪ್ರತಿಭಟನೆ ನಡೆಸಿದ್ದರು.  ಅದರಲ್ಲೂ ಮಡಿಕೇರಿಯಲ್ಲಿ ಸಂಘ ಪರಿವಾರದವರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ವಿಶ್ವ ಹಿಂದೂ ಪರಿಷತ್‍ನ ಕಾರ್ಯಕರ್ತ ಕುಟ್ಟಪ್ಪ ಎಂಬುವರು ಸಾವನ್ನಪ್ಪಿದ್ದರು. ಪ್ರತಿಭಟನೆ ನಡೆಸಿದ ಕಾರ್ಯಕರ್ತರ ವಿರುದ್ಧ ನಾನಾ ಭಾಗಗಳಲ್ಲಿ 150ಕ್ಕೂ ಹೆಚ್ಚು ದೂರುಗಳು ದಾಖಲಾಗಿದ್ದವು. ಇವರೆಲ್ಲರೂ ಪೊಲೀಸ್ ಠಾಣೆ, ನ್ಯಾಯಾಲಯಕ್ಕೆ ಅಲೆದಾಡಿದ್ದರು.

ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಂಘಪರಿವಾರದ ನಾಯಕರ ಮೇಲೆ ದಾಖಲಾಗಿರುವ ಎಲ್ಲ ಪ್ರಕರಣಗಳನ್ನು ಹಿಂಪಡೆಯಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ಆರ್‍ಎಸ್‍ಎಸ್ ಸೂಚನೆ ಕೊಟ್ಟಿತ್ತು.  ಇದೀಗ ಯಾವ ಯಾವ ಠಾಣೆಗಳಲ್ಲಿ ದೂರುಗಳು ದಾಖಲಾಗಿದ್ದವೋ ಅದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಬೇಕೆಂದು ಪೊಲೀಸ್ ಮಹಾನಿರ್ದೇಶಕರಾದ ನೀಲಮಣಿ ರಾಜು ಅವರಿಗೆ ಸೂಚನೆ ಕೊಟ್ಟಿದ್ದರು.

ಇದರನ್ವಯ ಸಂಘ ಪರಿವಾರದ ನಾಯಕರ ವಿರುದ್ದ ಒಟ್ಟು 150ಕ್ಕೂ ಹೆಚ್ಚು ದೂರು ದಾಖಲಾಗಿರುವುದರ ಬಗ್ಗೆ ಮಾಹಿತಿ ನೀಡಿದ್ದರು. ಮುಂದಿನ ಸಂಪುಟ ಸಭೆಯಲ್ಲಿ ಈ ಎಲ್ಲ ಪ್ರಕರಣಗಳನ್ನು ಹಿಂಪಡೆಯಲು ಟಿಪ್ಪಣಿ ಸಿದ್ದಪಡಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸೂಚನೆ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮಡಿಕೇರಿ ಮತ್ತು ವಿರಾಜಪೇಟೆ ಶಾಸಕರಾದ ಕೆ.ಜಿ.ಬೋಪಯ್ಯ ಹಾಗೂ ಅಪ್ಪಚ್ಚುರಂಜನ್ ಮುಖ್ಯಮಂತ್ರಿಗೆ ಪತ್ರ ಬರೆದು ಈ ಎಲ್ಲ ಪ್ರಕರಣಗಳನ್ನು ಹಿಂಪಡೆಯುವಂತೆ ಮನವಿ ಮಾಡಿದ್ದನ್ನು ಸ್ಮರಿಸಿಕೊಳ್ಳಬಹುದು.

Facebook Comments