ಯಲಹಂಕವನ್ನು ಮಾದರಿ ಕ್ಷೇತ್ರ ಮಾಡಲು ಮತ್ತಷ್ಟು ಅನುದಾನ : ಎಸ್.ಆರ್. ವಿಶ್ವನಾಥ್

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಯಲಹಂಕ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಮತ್ತಷ್ಟು ಅನುದಾನವನ್ನು ತರುವುದಾಗಿ ಕ್ಷೇತ್ರದ ಶಾಸಕರೂ ಆಗಿರುವ ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ತಿಳಿಸಿದ್ದಾರೆ. ಅವರು ಶನಿವಾರ ಕೆಂಗನಹಳ್ಳಿ, ಅವೇರಹಳ್ಳಿ, ರಾವುತ್ತನಹಳ್ಳಿ, ಮಲ್ಲಸಂದ್ರ, ಬೆಟ್ಟಹಳ್ಳಿ, ಕಡಬಗೆರೆ, ಬೈಯಂಡಹಳ್ಳಿ, ಮಾಚೋಹಳ್ಳಿ, ಚಿಕ್ಕಗೊಲ್ಲರಹಟ್ಟಿ, ಕಾಜೋಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ, ಒಳಚರಂಡಿ ಕಾಮಗಾರಿ ಸೇರಿದಂತೆ ಇನ್ನಿತರೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಈ ಗ್ರಾಮಗಳನ್ನು ಮತ್ತಷ್ಟು ಸುಂದರ ಮತ್ತು ಸ್ವಚ್ಛವಾಗಿಸುವ ನಿಟ್ಟಿನಲ್ಲಿ ಒಟ್ಟು 5 ಕೋಟಿಗೂ ಅಧಿಕ ಅನುದಾನದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು. ನಮ್ಮ ಕ್ಷೇತ್ರವನ್ನು ಇಡೀ ರಾಜ್ಯದಲ್ಲಿ ಮಾದರಿ ಕ್ಷೇತ್ರವನ್ನಾಗಿ ಮಾಡುವ ಸಂಕಲ್ಪ ಹೊಂದಿದ್ದೇನೆ. ಇದಕ್ಕೆ ಸಾರ್ವಜನಿಕರು ಮತ್ತು ಸಂಘ ಸಂಸ್ಥೆಗಳ ಸಹಕಾರವೂ ಅಗತ್ಯವಿದೆ ಎಂದು ಮನವಿ ಮಾಡಿದರು.

ಯಲಹಂಕ ನಗರ ಮತ್ತು ಗ್ರಾಮೀಣದ ಸೊಗಡನ್ನು ಹೊಂದಿರುವ ಕ್ಷೇತ್ರವಾಗಿದೆ. ಇಲ್ಲಿ ಹಲವಾರು ವೈವಿಧ್ಯಮಯ ಸಂಸ್ಕೃತಿಗಳನ್ನು ಕಾಣುತ್ತೇವೆ. ನಗರ ವ್ಯಾಪ್ತಿಯಲ್ಲಿನ ಪ್ರದೇಶಗಳು ಸಾಕಷ್ಟು ಅಭಿವೃದ್ಧಿ ಕಂಡಿವೆ. ಇದೇ ರೀತಿಯಲ್ಲಿ ಗ್ರಾಮೀಣ ಸೊಗಡನ್ನು ಉಳಿಸಿಕೊಂಡು ಗ್ರಾಮಾಂತರ ಪ್ರದೇಶಗಳನ್ನು ಅಭಿವೃದ್ಧಿ ಮಾಡಲಾಗುವುದು ಎಂದು ತಿಳಿಸಿದರು.

ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಮ್ಮ ಕ್ಷೇತ್ರದ ಬಗ್ಗೆ ವಿಶೇಷ ಆಸಕ್ತಿ ತೋರಿದ್ದಾರೆ. ಈ ಕಾರಣದಿಂದಲೇ ಕಾಲಕಾಲಕ್ಕೆ ಕ್ಷೇತ್ರಕ್ಕೆ ಉತ್ತಮವಾದ ರೀತಿಯಲ್ಲಿ ಅನುದಾನ ನೀಡುತ್ತಿದ್ದಾರೆ. ಇದಕ್ಕಾಗಿ ಅವರಿಗೆ ಕ್ಷೇತ್ರದ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇನೆ ಎಂದು ಹೇಳಿದರು.
ಈ ಬಾರಿ ಕ್ಷೇತ್ರಕ್ಕೆ ಇನ್ನಷ್ಟು ಅನುದಾನವನ್ನು ಬಿಡುಗಡೆ ಮಾಡಿಸಿ ಅಭಿವೃದ್ಧಿಗೆ ಒತ್ತು ನೀಡಲಾಗುತ್ತದೆ ಎಂದರು.

ಆರ್ಥಿಕ ವಾಗಿ ಹಿಂದುಳಿದ ಕುಟುಂಬಗಳಿಗಾಗಿ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಕ್ಷೇತ್ರದಲ್ಲಿ 11,000 ಕ್ಕೂ ಅಧಿಕ ಮನೆಗಳನ್ನು ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಕೆಲವೇ ತಿಂಗಳುಗಳಲ್ಲಿ ಕಾಮಗಾರಿ ಪೂರ್ಣಗೊಂಡು ಹಂತಹಂತವಾಗಿ ಅರ್ಹ ಫಲಾನುಭವಿಗಳಿಗೆ ಮನೆಗಳನ್ನು ಹಂಚಿಕೆ ಮಾಡಲಾಗುವುದು ಎಂದು ವಿಶ್ವನಾಥ್ ತಿಳಿಸಿದರು.

ಫೋಟೋ ಶೀರ್ಷಿಕೆ: ಯಲಹಂಕ ಕ್ಷೇತ್ರದ ವಿವಿಧ ಗ್ರಾಮಪಂಚಾಯ್ತಿ ವ್ಯಾಪ್ತಿಯಲ್ಲಿ ಕಾಂಕ್ರೀಟ್ ರಸ್ತೆ, ಒಳಚರಂಡಿ ನಿರ್ಮಾಣ ಇನ್ನಿತರೆ ಕಾಮಗಾರಿಗಳಿಗೆ ಬಿಡಿಎ ಅಧ್ಯಕ್ಷ ಎಸ್.ಆರ್. ವಿಶ್ವನಾಥ್ ಶನಿವಾರ ಚಾಲನೆ ನೀಡಿದರು.

Facebook Comments

Sri Raghav

Admin