ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ : ಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ನ.11-ಮಹಿಳೆಯರು ನಿರ್ಭೀತಿಯಿಂದ ಜೀವನ ಸಾಗಿಸಲು ನಮ್ಮ ಸರ್ಕಾರ ಹಲವು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.  ವಿಧಾನಸೌಧ ಮುಂಭಾಗದಲ್ಲಿ ಇಂದು ನಿರ್ಭಯ ಯೋಜನೆಯಡಿ ಪೊಲೀಸ್ ಠಾಣೆಗಳಿಗೆ 751 ದ್ವಿಚಕ್ರ ವಾಹನಗಳನ್ನು ಹಸ್ತಾಂತರ ಮಾಡಿ ಮಾತನಾಡಿದ ಅವರು, ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ ಎಂದರು.

ಇತರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಮಹಿಳೆಯರಿಗೆ ಅತ್ಯಂತ ಸುರಕ್ಷಿತ ತಾಣವಾಗಿದೆ. ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ನಾವು ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ತಿಳಿಸಿದರು.  ಮಹಿಳೆಯರ ಸುರಕ್ಷತೆಗಾಗಿ ಕೇಂದ್ರ ಸರ್ಕಾರ ನಿರ್ಭಯ ಯೋಜನೆಯನ್ನು ಜಾರಿ ಮಾಡಿದೆ. ಈ ಯೋಜನೆಯಡಿ ಮಹಿಳೆಯರ ರಕ್ಷಣೆಗಾಗಿ ಹಲವು ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ನಾಗರಿಕ ಸಮಾಜದಲ್ಲಿ ಮಹಿಳೆ ನಿರ್ಭೀತಿಯಿಂದ ಇರಬೇಕು. ಇದಕ್ಕಾಗಿ ನಾವು ಎಲ್ಲ ತ್ವರಿತ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದರು.

ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಮಾತನಾಡಿ, ಫೇಸ್‍ಬುಕ್, ವಾಟ್ಸಪ್, ಟ್ವಿಟರ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಕಿಡಿಗೇಡಿಗಳು ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಸಮಾಜದಲ್ಲಿ ಅಶಾಂತಿ ಉಂಟು ಮಾಡುವ ಹುನ್ನಾರ ನಡೆಸುತ್ತಿದ್ದಾರೆ.  ಇದನ್ನು ತಡೆಗಟ್ಟಲು ಈಗಾಗಲೇ ಕೆಲವು ಸಾಮಾಜಿಕ ಜಾಲತಾಣಗಳ ಸಿಇಒ ಜೊತೆ ಮಾತುಕತೆ ನಡೆಸಲಾಗಿದೆ. ಸುಳ್ಳು ವದಂತಿಗಳನ್ನು ಹಬ್ಬಿಸುವವರಿಗೆ ಕಾನೂನು ಕ್ರಮ ಖಚಿತ ಎಂದು ಎಚ್ಚರಿಸಿದರು.

ಡ್ರಗ್ಸ್ ವಿರುದ್ಧ ನಮ್ಮ ಸರ್ಕಾರ ಸಮರವನ್ನೇ ಸಾರಿದೆ. ತನಿಖೆ ಮುಂದುವರೆದಿದ್ದು, ಅನೇಕರು ವಿಚಾರಣೆಗೊಳಪಟ್ಟಿದ್ದಾರೆ. ತನಿಖೆ ನಡೆಯುತ್ತಿರುವುದರಿಂದ ಈ ಸಂದರ್ಭದಲ್ಲಿ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.  ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಸರ್ಕಾರ ಶಕ್ತಿಮೀರಿ ಪ್ರಯತ್ನಿಸುತ್ತಿದೆ. ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡುತ್ತಿದ್ದಾರೆ. ಪೊಲೀಸ್ ಇಲಾಖೆಗೆ ಬೇಕಾದ ಎಲ್ಲ ನೆರವುಗಳನ್ನು ಕೊಡುತ್ತಿದೆ. ಇದಕ್ಕಾಗಿ ನಾನು ಅವರನ್ನು ಅಭಿನಂದಿಸುತ್ತೇನೆ ಎಂದರು.

ಸೈಬರ್ ಕ್ರೈಂ ತಡೆಯುವುದು ನಮಗೆ ದೊಡ್ಡ ಸವಾಲಾಗಿದೆ. ಅದರಲ್ಲೂ ಫೇಸ್‍ಬುಕ್ ಮೂಲಕ ನಡೆಯುವ ಅಪರಾಧಗಳನ್ನು ಪತ್ತೆ ಹಚ್ಚುವುದು ಅಷ್ಟು ಸುಲಭವಲ್ಲ. ಇಂತಹ ಪ್ರಕರಣಗಳು ಪದೇ ಪದೇ ಮರುಕಳಿಸದಂತೆ ಎಚ್ಚರ ವಹಿಸುತ್ತಿದ್ದೇವೆ. ಈ ಹಿನ್ನೆಲೆಯಲ್ಲಿ ಫೇಸ್‍ಬುಕ್ ಮುಖ್ಯಸ್ಥರ ಜೊತೆ ಮಾತುಕತೆ ನಡೆಸಲಾಗಿದೆ.

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಆಧುನಿಕ ವ್ಯವಸ್ಥೆ ಮಾಡಲಾಗುತ್ತಿದೆ. ನಗರದಲ್ಲಿ ಎಫ್‍ಎಸ್‍ಎಲ್ ಪ್ರಯೋಗಾಲಯ ಸಿದ್ದವಾಗಿದ್ದು, ಶೀಘ್ರದಲ್ಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಉದ್ಘಾಟಿಸಲಿದ್ದಾರೆ ಎಂದು ಇದೇ ವೇಳೆ ಬೊಮ್ಮಾಯಿ ತಿಳಿಸಿದರು.

Facebook Comments