ಯಡಿಯೂರಪ್ಪ ಸಂಪುಟದಲ್ಲಿದ್ದ 7 ಮಂದಿಗೆ ಕೋಕ್..!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು,ಆ.4- ಯಡಿಯೂರಪ್ಪ ಸಂಪುಟದಲ್ಲಿದ್ದ 7 ಮಂದಿಗೆ ಕೋಕ್ ನೀಡಲಾಗಿದೆ.  ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣಸವದಿ, ಸಚಿವರಾಗಿದ್ದ ಜಗದೀಶ್ ಶೆಟ್ಟರ್, ಅರವಿಂದ ಲಿಂಬಾವಳಿ, ಶ್ರೀಮಂತ ಪಾಟೀಲ್, ಸುರೇಶ್‍ಕುಮಾರ್, ಸಿ.ಪಿ.ಯೋಗೇಶ್ವರ್, ಆರ್.ಶಂಕರ್ ಅವರನ್ನು ಸಂಪುಟದಿಂದ ಕೈ ಬಿಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ಸೇರ್ಪಡೆಯಾಗುವುದಿಲ್ಲ ಎಂದು ಜಗದೀಶ್ ಶೆಟ್ಟರ್ ಈಗಾಗಲೇ ಸ್ಪಷ್ಟಪಡಿಸಿದ್ದರು. ಮಾಜಿ ಡಿಸಿಎಂ ಲಕ್ಷ್ಮಣಸವದಿ ಕೊನೆ ಕ್ಷಣದವರೆಗೂ ಸಂಪುಟಕ್ಕೆ ಸೇರ್ಪಡೆಯಾಗಲು ದೆಹಲಿಗೆ ತೆರಳಿ ಲಾಬಿ ನಡೆಸಿದ್ದರು.

ಆದರೆ, ಪಕ್ಷದ ರಾಷ್ಟ್ರೀಯ ನಾಯಕರು ಯಾವುದೇ ಲಾಬಿಗೆ ಮಣಿಯದ ಕಾರಣ ಲಕ್ಷ್ಮಣ ಸವದಿಗೆ ನಿರಾಸೆಯಾಗಿದೆ. ಉಳಿದಂತೆ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡಿದ್ದ ವಿಧಾನಪರಿಷತ್ ಸದಸ್ಯ ಆರ್.ಶಂಕರ್‍ಗೂ ಕೋಕ್ ನೀಡಲಾಗಿದೆ.ಅರವಿಂದ ಲಿಂಬಾವಳಿಗೆ ಮುಂದಿನ ದಿನಗಳಲ್ಲಿ ಪಕ್ಷದ ಅಧ್ಯಕ್ಷ ಸ್ಥಾನ ನೀಡಲಾಗುವುದು ಎಂದು ವರಿಷ್ಠರು ಭರವಸೆ ಕೊಟ್ಟಿರುವ ಹಿನ್ನೆಲೆಯಲ್ಲಿ ಸಂಪುಟಕ್ಕೆ ಪರಿಗಣಿಸಿಲ್ಲ.

ಹಾಲಿ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅಧಿಕಾರಾವಧಿ ಕೆಲವು ತಿಂಗಳ ನಂತರ ಮುಗಿಯುತ್ತಿರುವ ಕಾರಣ ತೆರವಾಗಲಿರುವ ಈ ಸ್ಥಾನಕ್ಕೆ ಲಿಂಬಾವಳಿ ಸಾರಥ್ಯ ವಹಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಸಿ.ಪಿ.ಯೋಗೇಶ್ವರ್ ಅವರು ಯಡಿಯೂರಪ್ಪ ಅವರಿಗೆ ಸಡ್ಡು ಹೊಡೆದ ಕಾರಣ ಮಂತ್ರಿ ಸ್ಥಾನ ಕೈ ತಪ್ಪಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

Facebook Comments