ಇಂದು ಪ್ರಧಾನಿ ಜೊತೆ ಸಿಎಂ ಬಿಎಸ್‍ವೈ ವಿಡಿಯೋ ಸಂವಾದ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಏ.8- ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿಗಳ ಜೊತೆ ವಿಡಿಯೋ ಸಂವಾದ ನಡೆಸಲಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾಗಿಯಾಗಲಿದ್ದಾರೆ.  ಸಿಎಂ ಗೃಹ ಕಚೇರಿ ಕೃಷ್ಣಾದಿಂದ ಸಂಜೆ 6.30ಕ್ಕೆ ಪ್ರಧಾನಿಗಳ ವಿಡಿಯೋ ಸಂವಾದದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಭಾಗವಹಿಸಲಿದ್ದಾರೆ.

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆ ಹೆಚ್ಚಾಗುತ್ತಿದ್ದು, ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಮೋದಿ ಮಾಹಿತಿ ಪಡೆದುಕೊಳ್ಳಲಿದ್ದಾರೆ. ನೆರೆ ರಾಜ್ಯಗಳಲ್ಲಿ ಕೊರೊನಾ ಸೋಂಕು ತೀವ್ರತರವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಗಡಿಯಲ್ಲಿ ಕೈಗೊಳ್ಳಬೇಕಿರುವ ಮುನ್ನೆಚ್ಚರಿಕೆ, ಕೋವಿಡ್ ತಪಾಸಣೆ ಹೆಚ್ಚಳ, ಮಾರ್ಗಸೂಚಿ ಪಾಲನೆಗೆ ಕಟ್ಟುನಿಟ್ಟಿನ ಕ್ರಮದ ಕುರಿತು ಚರ್ಚೆ ನಡೆಸಲಾಗುತ್ತದೆ.

ಕೊರೊನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ ಕೇರ್ ಸೆಂಟರ್‍ಗಳ ವ್ಯವಸ್ಥೆ, ಸರ್ಕಾರಿ ಆಸ್ಪತ್ರೆಗಳಲ್ಲಿ ಬೆಡ್ ವ್ಯವಸ್ಥೆ, ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗೆ ಬೆಡ್ ಕಾಯ್ದಿರಿಸುವಿಕೆ, ಐಸಿಯು ಬೆಡ್ ವ್ಯವಸ್ಥೆ, ಆಕ್ಸಿಜನ್ ದಾಸ್ತಾನು ಕುರಿತು ಸಿಎಂ ಯಡಿಯೂರಪ್ಪ ಜತೆ ಪಿಎಂ ಮೋದಿ ವಿಸ್ತೃತ ಚರ್ಚೆ ನಡೆಸಲಿದ್ದಾರೆ.

ರಾಜ್ಯದಲ್ಲಿ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಎರಡೂ ಲಸಿಕೆಯನ್ನು ನೀಡಲಾಗುತ್ತಿದ್ದು, ಲಸಿಕೆ ನೀಡಿಕೆಯನ್ನು ಹೆಚ್ಚಿಸುವ ಕುರಿತು ರಾಜ್ಯಕ್ಕೆ ಮೋದಿ ಸೂಚನೆ ನೀಡುವ ಸಾಧ್ಯತೆ ಇದೆ.

Facebook Comments